ಬೆಂಗಳೂರು: ಮಂಗಳೂರು ಪೌರತ್ವ ಕಾಯ್ದೆ ಪ್ರತಿಭಟನೆ ಹಾಗೂ ಪೊಲೀಸ್ ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಸದನ ಸಮಿತಿ ರಚನೆಯಾಗಲಿ ಎಂದು ಮಾಜಿ ಸಿಎಂ ಎಚ್‌. ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಘಟನೆಯ ವಿಡಿಯೋ ಬಿಡುಗಡೆಗೊಳಿಸಿದ ಅವರು, ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರಿಯಲ್ ಹಾಗೂ ಸಿಐಡಿ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲು ಸಾಧ್ಯವಿಲ್ಲ. ಬದಲಾಗಿ ಎಲ್ಲಾ ಪಕ್ಷಗಳನ್ನು ಒಳಗೊಂಡ ಸದನ ಸಮಿತಿಯನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಮಂಗಳೂರು ಗೋಲಿಬಾರ್‌ ಪ್ರಕರಣದ ಕುರಿತಾಗಿ ತನಿಖೆ ಪೂರ್ಣಗೊಳ್ಳುವ ಮೊದಲೇ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಗೃಹಸಚಿವರು ಹೇಳಿಕೆಗಳನ್ನು ನೀಡಿದ್ದಾರೆ. ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಸರಕಾರದ ಅಧೀನದಲ್ಲಿರುವ ಪೊಲೀಸರ ತನಿಖೆಯಿಂದ ಸತ್ಯ ಹೊರಬರಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಸಿಡಿ ಬಿಡುಗಡೆ ಮಾಡುವ ಮೂಲಕ ಎಚ್‌ಡಿಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಬೆಂಕಿ ಹಚ್ಚೋದರಲ್ಲಿ ಬಿಜೆಪಿಗರು ನಿಸ್ಸೀಮರು. ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದೆ ಶೋಭಾ ಕರಂದ್ಲಾಜೆ ಬೆಂಕಿ ಹಚ್ಚೋ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಿಡಿಕಾರಿದರು.

ಮಂಗಳೂರು ಗಲಭೆ ಪೂರ್ವನಿಯೋಜಿತ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ ಅವರು, ಪ್ರತಿಭಟನೆಯ ದಿನದಂದು ಮಂಗಳೂರಿನಲ್ಲಿ ರಾಜ್ಯ ಸರಕಾರ ಹಾಗೂ ಪೊಲೀಸರು ಮಾಡಿರುವುದು ತಪ್ಪು ಎಂದಿದ್ದಾರೆ.

ಲಾಠಿಚಾರ್ಜ್‌ ಸಂದರ್ಭದಲ್ಲಿ ಪತ್ರಕರ್ತರ ಮೇಲೂ ಹಲ್ಲೆಯಾಗಿದೆ ಹಾಗೂ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಕೂಡಾ ಪೊಲೀಸರು ಹಲ್ಲೆ ಮಾಡಿದ್ದಾರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತರಾದ ಡಾ. ಹರ್ಷ ಅವರ ನಡೆ ಅನುಮಾನಾಸ್ಪದವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.