ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಸಲ್ಲದು: ಚುನಾವಣಾ ಆಯೋಗ
ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 14, (ಕರ್ನಾಟಕ ವಾರ್ತೆ): ರಾಜ್ಯ ಚುನಾವಣಾ ಆಯೋಗವು ಕರ್ನಾಟಕದಲ್ಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಿದ್ದು, ದಿನಾಂಕ:30-11-2020 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಮಾದರಿ ನೀತಿ ಸಂಹಿತೆಯು ಹಾಗೂ ಕಾನೂನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮವಹಿಸಲು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳಾದ ಶ್ರೀಮತಿ ಹೊನ್ನಾಂಬ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಯಾಗಿದ್ದು, ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ-ಸಮಾರಂಭಗಳನ್ನು ನಡೆಸುವ ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡದಿರುವಂತೆ ಎಚ್ಚರಿಕೆ ವಹಿಸಲು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸಲು ಅನುಮತಿಸಲಾಗಿರುವುದಿಲ್ಲ. ಸ್ಪರ್ಧಾಳುಗಳನ್ನು ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತಯಾಚನೆ ಮಾಡುವುದನ್ನು ಅನುಮತಿಸಿರುವುದಿಲ್ಲ.
ಚುನಾವಣೆಗೆ ಸ್ಪರ್ಧಿಸಿದ ಸ್ಪರ್ಧಾಳುಗಳು ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆಯಿರುವ ಕರಪತ್ರ, ಕಟೌಟ್, ಬ್ಯಾನರ್ ಮತ್ತು ಬಂಟಿಂಗ್‍ಗಳು, ಟಿ.ವಿ.ಮಾಧ್ಯಮಗಳು ಹಾಗೂ ಪತ್ರಿಕೆಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಇವುಗಳಲ್ಲಿ ಯಾವುದೇ ಪ್ರಕರಣಗಳು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಮತದಾರರ ಜಾಗೃತಿ ಪ್ರಚಾರಾಂದೋಲನಕ್ಕೆ ಚಾಲನೆ
ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 14, (ಕರ್ನಾಟಕ ವಾರ್ತೆ): ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಡಿಸೆಂಬರ್ 15 ರಂದು 11.30ಕ್ಕೆ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಫ್ (sveeಠಿ) ಸಮಿತಿಯ ಅಧ್ಯಕ್ಷರಾದ ಕೆ.ಶಿವರಾಮೇಗೌಡ ಅವರು ಚಾಲನೆ ನೀಡಲಿದ್ದಾರೆ.
ಚುನಾವಣಾ ಸಂಬಂಧಿತ ಜಾಗೃತಿಗಾಗಿ ಬೆಂಗಳೂರು ನಗರ ಜಿಲ್ಲೆಯ ಸ್ವೀಪ್ ಸಮಿತಿಯ ಕಾರ್ಯಚಟುವಟಿಕೆಗಳ ಭಾಗವಾಗಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸಾಂಸ್ಕøತಿಕ ಮತ್ತು ಜಾನಪದ ಕಲಾತಂಡದಿಂದ ಬಿದಿನಾಟಕ ಕಾರ್ಯಕ್ರಮ ಹಾಗೂ ಮಧುರ ಕಲಾತಂಡಗಳಿಂದ ಜಾಗೃತಿ ಗೀತೆಗಳ ಕಾರ್ಯಕ್ರಮವನ್ನು ಡಿಸೆಂಬರ್ 15 ರಿಂದ ಡಿಸೆಂಬರ್ 24 ರವರೆಗೆ ಜಿಲ್ಲಾದ್ಯಂತ 40 ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಎರಡು ಕಲಾ ತಂಡಗಳು 10 ದಿನಗಳ ಕಾಲ ಪ್ರತಿನಿತ್ಯ ಎರಡು ಗ್ರಾಮಗಳಂತೆ 20 ಗ್ರಾಮಗಳಲ್ಲಿ ಮತದಾನದ ಮಹತ್ವ ಕುರಿತು ವಿಶೇಷ ಬೀದಿನಾಟಕ ಹಾಗೂ ಜಾಗೃತಿ ಗೀತೆಗಳನ್ನು ಹಾಡುವರು. ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಕೋರಿದ್ದಾರೆ.