*ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ*

*ಉತ್ಸವದ ಸಿದ್ಧತೆ ಪರಿಶೀಲಿಸಿದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್*

– ದಕ್ಷಿಣ ಭಾರತ ರಾಜ್ಯಗಳನ್ನ ಪ್ರವಾಸೋದ್ಯಮ ಕ್ಷೇತ್ರವನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಉದ್ದೇಶ

*ಬೆಂಗಳೂರು, ಜೂನ್ 14*: ‌ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮ “ದಕ್ಷಿಣ ಭಾರತ ಉತ್ಸವ – 2024” ಕ್ಕೆ ಸಿದ್ದತೆಗಳು ಪೂರ್ಣಗೊಂಡಿವೆ.

ಉತ್ಸವ ನಡೆಯುವ ಅರಮನೆ ಮೈದಾನದ ಪ್ರಿನ್ಸಸ್ ಶ್ರೈನ್ ಗೇಟ್ 9 ರಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್‌ ಚಂದ್ರ ಲಹೋಟಿ ಮತ್ತು ಅಧಿಕಾರಿಗಳ ಜೊತೆ ಉತ್ಸವದ ಸಿದ್ದತೆಗಳನ್ನು ಪರಿಶೀಲಿಸಿದರು. ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿ ಹೂಡಿಕೆ ನೀರೀಕ್ಷೆ ಹೊಂದಿರುವ ಈ ಮಹತ್ವಾಕಾಂಕ್ಷೆಯ ಸಮಾವೇಶಕ್ಕೆ ಅಂತಿಮ ಸ್ಪರ್ಷ ನೀಡುವ ನಿಟ್ಟಿನಲ್ಲಿ ಸೂಚನೆ ನೀಡಿದರು. ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿಗಳ, ದೇಶ – ವಿದೇಶಗಳ ಗಣ್ಯರು, ಬಂಡವಾಳ ಹೂಡಿಕೆದಾರರು ಸೇರಿದಂತೆ 1500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ. ರಾಮ್ ಪ್ರಸಾತ್ ಮನೋಹರ್, ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿನ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇವುಗಳನ್ನ ಒಂದೇ ವೇದಿಕೆಯ ಅಡಿಯಲ್ಲಿ ತರುವುದು ಹಾಗೂ ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳಲು ಅನುವು ಮಾಡಿಕೊಡುವುದು ಈ ಉತ್ಸವದ ಉದ್ದೇಶವಾಗಿದೆ. 80 ಕ್ಕೂ ಹೆಚ್ಚು ಸ್ಟಾಲ್‌ಗಳಿದ್ದು, ಏಳೂ ರಾಜ್ಯಗಳ ಪ್ರವಾಸೋದ್ಯಮ ಇಲಾಖೆ ಹಾಗೂ ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಮೂಲಕ ಒಗ್ಗಟ್ಟಾಗಿ ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರೋತ್ಸಾಹಿಸುವುದು ಉತ್ಸವದ ಗುರಿಯಾಗಿದೆ ಎಂದರು.

*ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್‌ ಚಂದ್ರ ಲಹೋಟಿ ಮಾತನಾಡಿ*, ಜೂನ್‌ 15 ರಂದು ಬೆಳಿಗ್ಗೆ ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್, ಭೈರತಿ ಸುರೇಶ್, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ವಸತಿ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್, ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್, ಶಾಸಕರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ. ಗೋವಿಂದ್ ರಾಜ್, ನಸೀರ್ ಅಹಮದ್, ಎಫ್ಕೆಸಿಸಿಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಲ್ಮಾ ಕೆ ಫಾಹೀಮ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಜೂ.16 ರಂದು ಸಂಜೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಸೆಮಿನಾರ್‌ಗಳನ್ನು ಆಯೋಜಿಸಲಾಗಿದೆ ಎಂದರು.