ಕೆಪಿಸಿಸಿ ಅಧ್ಯಕ್ಷ ಸ್ಥಾನ ಚರ್ಚೆ ನಡುವೆ ಸತೀಶ್ ಜಾರಕಿಹೊಳಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಬೆಂಬಲ..!!!

 

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಎಸ್‌ಸಿ, ಎಸ್‌ಟಿ ಹಾಗೂ ವಿವಿಧ ಹಿಂದುಳಿದ ವರ್ಗಗಳ 21 ಮಂದಿ ಸ್ವಾಮೀಜಿಗಳು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

 

ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬೋವಿ, ವಾಲ್ಮೀಕಿ, ಕುರುಬ, ಮಡಿವಾಳ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಭಾಗವಹಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ನಾಯಕನಿಗೆ ಅವಕಾಶ ನೀಡಬೇಕು ಹಾಗೂ ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ದೊರಕಬೇಕು ಎಂಬ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

 

ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಪ್ರಸ್ತಾಪಗೊಂಡಿವೆ ಎನ್ನಲಾಗಿದೆ.

 

ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಇದೇ ವಿಚಾರಗಳ ಕುರಿತು ಚರ್ಚಿಸಲು ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

 

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದೊಳಗಿನ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಸಂದರ್ಭದಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದ್ದು, ಮುಂದಿನ ರಾಜಕೀಯ ನಿರ್ಧಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.